ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮಾರುತಗಳು ಮತ್ತೆ ಚುರುಕುಗೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣುತ್ತಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿಯುತ್ತಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಬದಲಾವಣೆಯ ಪರಿಣಾಮವಾಗಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಗದಗ, ರಾಯಚೂರು, ಕೊಪ್ಪಳ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ಸೆಪ್ಟೆಂಬರ್ 8 ಮತ್ತು 9ರಂದು ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆದರೆ ಸೆಪ್ಟೆಂಬರ್ 10ರಿಂದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಗುಡುಗು-ಮಿಂಚು ಸಹಿತ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 12 ಮತ್ತು 13ರ ವೇಳೆಗೆ ಮಳೆಯ ವ್ಯಾಪ್ತಿ ಮತ್ತಷ್ಟು ವಿಸ್ತಾರಗೊಳ್ಳಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ. ಈ ದಿನಗಳಲ್ಲಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.




