ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಳ್ಳ-ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಬೆಳೆಗಳು ಜಲಾವೃತಗೊಂಡ ರೈತರು ಕಂಗಾಲಾಗಿದ್ದಾರೆ. ಇನ್ನೂ, ನಾಲ್ಕೈದು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ, ಧಾರವಾಡ, ವಿಜಯಪುರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು, ಮಿಂಚು ಸಹಿತ ಬಿರುಗಾಳಿ ಬಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.




