ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಸೋಮವಾರದಿಂದ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಪರಿಣಾಮ ರಾಜ್ಯದಲ್ಲಿ ಮಳೆ ಬಿರುಸು ಪಡೆಯಲಿದೆ ಎಂದು ಇಲಾಖೆ ಹೇಳಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಅರಬ್ಬೀ ಸಮುದ್ರದ ಕರಾವಳಿ ತೀರದಲ್ಲಿ ಮೇಲ್ಮೈ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ತಲುಪಲಿದ್ದು, ಸಮುದ್ರ ಕೊರೆತ ಮತ್ತು ಅಲೆಗಳ ಆರ್ಭಟ ತೀವ್ರಗೊಳ್ಳಲಿದೆ. ಹೀಗಾಗಿ ಅಪಾಯ ತಪ್ಪಿಸಲು ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮಲೆನಾಡು ಜಿಲ್ಲೆಗಳಲ್ಲಿ ಇಡೀ ದಿನ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಯಲ್ಲಿ ಮಳೆ ಸುರಿಯಲಿದೆ. ಅಂತೆಯೇ, ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ತೀವ್ರ ಗಾಳಿ ಮತ್ತು ಗುಡುಗು-ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಸೂಚಿಸಿದೆ.
ಇನ್ನು, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ವಿಜಯಪುರ, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದಾದ್ಯಂತ ಸಿಡಿಲು ಮತ್ತು ಮಿಂಚಿನ ಭೀತಿ ಇರುವುದರಿಂದ ಮಳೆ ಬರುವ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ರೈತರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕೆಂದು ಹವಾಮಾನ ಇಲಾಖೆ ಮನವಿ ಮಾಡಿದೆ.



