ದಕ್ಷಿಣ ಭಾರತದಲ್ಲಿ ನೈರುತ್ಯ ಮುಂಗಾರು ಮಾರುತಗಳು ತೀವ್ರಗೊಂಡಿವೆ. ಪರಿಣಾಮ, ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಮಳೆ ಅಬ್ಬರ ಮುಂದುವರೆಯಲಿದೆ ಎಂದು ತಿಳಿಸಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅದೇ ರೀತಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿದಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಅಂತೆಯೇ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ರಾಮನಗರ ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸಲಿದ್ದು, ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ ಮಾತ್ರವಲ್ಲದೆ, ನೆರೆಯ ರಾಜ್ಯ ಕೇರಳದಲ್ಲಿಯೂ ಮಳೆ ಆರ್ಭಟ ಜೋರಾಗಿರಲಿದೆ. ಈಗಾಗಲೇ, ಗುಡ್ಡ ಕುಸಿತದಿಂದ ತತ್ತರಿಸುತ್ತಿರುವ ಕೇರಳದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ. ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ, ಆಲಪ್ಪುಳ, ಇಡುಕ್ಕಿ, ಎರ್ನಾಕುಲಂ, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ 7 ರಿಂದ 11 ಸೆಂಟಿಮೀಟರ್‌ನಷ್ಟು ಭಾರಿ ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡಿನ ಪಶ್ಚಿಮ ಘಟ್ಟದ ಜಿಲ್ಲೆಗಳು, ಉತ್ತರ ತಮಿಳುನಾಡು ಹಾಗೂ ಚೆನ್ನೈನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.



