ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಬಿಸಿಲಿನ ಝಳದಿಂದ ಜನರು ದಣಿಯುತ್ತಿದ್ದಾರೆ. ಬೇಸಿಗೆಯ ಬಿಸಿಯ ನಡುವೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯೂ ಆಗುತ್ತಿದ್ದು, ಭೂಮಿಗೆ ತಂಪೆರೆಯುತ್ತಿದೆ. ಏಪ್ರಿಲ್ 10ರವೆರೆಗೆ ಇನ್ನೂ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಕೊಪ್ಪಳ, ಗದಗ, ರಾಯಚೂರು, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ. ಆದಾಗ್ಯೂ, ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಸಂಜೆ ವೇಳೆಯಲ್ಲಿ ಮೋಡಕವಿದ ವಾತಾವರಣ ಇರಲಿದೆ. ಹಗಲಿನ ತಾಪಮಾನವು ಗರಿಷ್ಠ 32 ರಿಂದ 34 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ಇಲಾಖೆ ವಿವರಿಸಿದೆ.



