ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಾಳಿಯೂ ವೇಗವಾಗಿ ಬೀಸಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬೀಸಲಿದೆ. ಜುಲೈ 19ರ ವೇಳೆಗೆ ಗಾಳಿಯ ವೇಗವು ಗಂಟೆಗೆ 60 ಕಿ.ಮೀ.ಗೆ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.
ಇನ್ನು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 20ವರೆಗೆ ಸಾಧಾರಣ ಮಳೆಯಾಗಲಿದೆ. ಜುಲೈ 20 ಮತ್ತು 21ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಯಚೂರು, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹಗುರ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.