ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹಿಂಗಾರು ಮಳೆಯ ಆರಂಭದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಶೇಷವಾಗಿ ಅಕ್ಟೋಬರ್ 14ರಿಂದ 18ರವರೆಗೆ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ತಿಳಿಸಿದೆ.
ಮುಂದಿನ 5 ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಕೋಲಾರ, ಬೆಂಗಳೂರು ದಕ್ಷಿಣ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನ ವೇಳೆಯೂ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ, ಮಳೆ ಸುರಿಯಲಿದೆ ಎಂದು ಇಲಾಖೆ ವಿವರಿಸಿದೆ.
ಮತ್ತೊಂದೆಡೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆರಂಭಿಕ ದಿನಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆಯಿದ್ದು, ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಸಂಪೂರ್ಣವಾಗಿ ಒಣ ಹವಾಮಾನವಿರಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಇದ್ದರೂ, ಆಗ್ಗಾಗ್ಗೆ ಮೋಡ ಕವಿದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಗದಗ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಬಿಸಿಲಿನ ತೀವ್ರತೆ ಅಧಿಕವಾಗಿರಲಿದೆ ಎಂದು ಇಲಾಖೆ ವಿವರಿಸಿದೆ.




