ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಈ ಹವಾಮಾನ ವೈಪರೀತ್ಯದ ಪರಿಣಾಮವಾಗಿ ನವೆಂಬರ್ 20ರಿಂದ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವೆಂಬರ್ 20ರಿಂದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಗದಗ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಲಿದೆ ಎಂದು ಇಲಾಖೆ ತಿಳಿಸಿದೆ.
ಆದರೆ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಇನ್ನು, ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ತುಸು ಚಳಿ ಮತ್ತು ಮಂಜು ಕವಿದ ವಾತಾವರಣ ಕಂಡುಬರಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾದರೂ, ಸಂಜೆಯ ವೇಳೆಗೆ ಮೋಡ ಕವಿಯುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.


