ಕರ್ನಾಟಕ ಹೈಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ತ್ರಿಪುರಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾ. ಎಂ.ಎಸ್. ರಾಮಚಂದ್ರ ರಾವ್ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರ ನೇತೃತ್ವದ ಕೊಲಿಜಿಯಂ ನವೆಂಬರ್ 24 ರಂದು ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕ, ಜಾರ್ಖಂಡ್ ಮತ್ತು ತ್ರಿಪುರಾ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಿದೆ.
ಜಾರ್ಖಂಡ್ ಹೈಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿಗಳು ನವೆಂಬರ್ 27ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿ ತೆರವಾಗಲಿರುವ ಹುದ್ದೆಯನ್ನು ಭರ್ತಿ ಮಾಡಲು ಈ ಸರಣಿ ಬದಲಾವಣೆಗಳನ್ನು ಮಾಡಲಾಗಿದೆ. ಇದರನ್ವಯ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲು ಸೂಚಿಸಲಾಗಿದೆ.
2013ರಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದು, ಅಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನ್ಯಾ. ಬಖ್ರು ಅವರು 2025ರಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೀಗ ಒಂದು ವರ್ಷದೊಳಗಾಗಿ ಅವರನ್ನು ಜಾರ್ಖಂಡ್ಗೆ ವರ್ಗಾಯಿಸಲು ಶಿಫಾರಸು ಮಾಡಲಾಗಿದೆ.
ನ್ಯಾಯಮೂರ್ತಿ ಬಖ್ರು ಅವರ ವರ್ಗಾವಣೆಯಿಂದ ಕರ್ನಾಟಕ ಹೈಕೋರ್ಟ್ನಲ್ಲಿ ತೆರವಾಗಲಿರುವ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ ನೇಮಕಗೊಳ್ಳಲಿದ್ದಾರೆ. ರಾವ್ ಅವರು ಈ ಹಿಂದೆ ತೆಲಂಗಾಣ ಮತ್ತು ಆಂಧ್ರಪ್ರದೇಶ ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, ತದನಂತರ ತ್ರಿಪುರಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೀಗ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯಸ್ಥರನ್ನಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.
ಇದೇ ವೇಳೆ, ನ್ಯಾಯಮೂರ್ತಿ ರಾಮಚಂದ್ರ ರಾವ್ ಅವರ ವರ್ಗಾವಣೆಯಿಂದ ತ್ರಿಪುರಾ ಹೈಕೋರ್ಟ್ನಲ್ಲಿ ತೆರವಾಗುವ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ತುಂಬಲು, ಹಿಮಾಚಲ ಪ್ರದೇಶ ಹೈಕೋರ್ಟ್ನ ನ್ಯಾಯಮೂರ್ತಿಯಾಗಿರುವ ವಿವೇಕ್ ಸಿಂಗ್ ಠಾಕೂರ್ ಅವರನ್ನು ತ್ರಿಪುರಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ಹೀಗೆ ಈ ಮೂರೂ ಶಿಫಾರಸುಗಳು ಒಂದಕ್ಕೊಂದು ಪೂರಕವಾಗಿದ್ದು, ಒಂದು ಹೈಕೋರ್ಟ್ನಲ್ಲಿ ತೆರವಾಗುವ ಸ್ಥಾನವನ್ನು ಮತ್ತೊಂದು ಹೈಕೋರ್ಟ್ನ ನ್ಯಾಯಮೂರ್ತಿಗಳ ಮೂಲಕ ವ್ಯವಸ್ಥಿತವಾಗಿ ಭರ್ತಿ ಮಾಡುವ ಕ್ರಮವನ್ನು ಅನುಸರಿಸಲಾಗಿದೆ.
ಕೊಲಿಜಿಯಂ ಕೈಗೊಂಡಿರುವ ಈ ನಿರ್ಣಯಗಳನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ರವಾನಿಸಿದ ಬಳಿಕ, ಕೇಂದ್ರ ಸರ್ಕಾರದಿಂದ ಅಧಿಕೃತ ಅನುಮೋದನೆ ದೊರೆಯಲಿದೆ. ನಂತರ, ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗುತ್ತದೆ.


