ಭ್ರಷ್ಟಾಚಾರ ಆರೋಪದಲ್ಲಿ ತಮ್ಮನ್ನು ಅಮಾನತು ಮಾಡಿರುವ ಆದೇಶವನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗುವವರೆಗೂ ಅಮಾನತು ಆದೇಶವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಆಗಿ ಸೇವೆಸಲ್ಲಿಸುತ್ತಿದ್ದ ಡಿ.ಎಂ ಪದ್ಮನಾಭ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2024ರ ಸೆಪ್ಟೆಂಬರ್ 6ರಂದು ಅವರನ್ನು ಅಮಾನತು ಮಾಡಲಾಗಿತ್ತು.
ತಮ್ಮ ಅಮಾನತು ಪ್ರಶ್ನಿಸಿ ಪದ್ಮನಾಭ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತಮ್ಮನ್ನ ಅಮಾನತು ಮಾಡಿರುವುದಕ್ಕೆ ಯಾವುದೇ ಕಾರಣ ನೀಡಿಲ್ಲವೆಂದು ವಾದಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿ.ಎಂ ಜೋಶಿ ಅವರಿದ್ದ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣ ಇತ್ಯರ್ಥವಾಗದೆ ಅಮಾನತು ಆದೇಶವನ್ನು ರದ್ದುಮಾಡಿದರೆ ಅಧಿಕಾರಿಗಳ ಕಾರ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.