ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ.
ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ಬೆಳಗ್ಗೆಯಿಂದಲೇ, ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿತು.
ಸಿಎಂ ವಿರುದ್ಧ ದಾವೆ ಹೂಡಿರುವ ಸ್ನೇಹಮಯಿ ಕೃಷ್ಣ ಪರವಾಗಿ ಮಣೀಂದರ ಸಿಂಗ್, ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ ಮನು ಸಿಂಗ್ವಿ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಪರ ಪ್ರೊ.ರವಿವರ್ಮಕುಮಾರ್, ದೇವರಾಜ ಪರ ದುಷ್ಯಂತ ದವೆ, ರಾಜ್ಯ ಸರಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು.
ಇದನ್ನೂ ಓದಿರಿ: ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?
ವಿಚಾರಣೆ ಮುಕ್ತಾಯದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸ್ನೇಹ ಮಯಿ ಕೃಷ್ಣ, ‘ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರು ಮಾಡಿರುವ ತಪ್ಪಿಗೆ ಸರಿಯಾದ ಶಿಕ್ಷೆ ಆಗಬೇಕಿದೆ. ಅವರು ಲೋಕಾಯುಕ್ತ ಅಧಿಕಾರಿಗಳ ಮೇಲೆ ಪ್ರಭಾವ ಬೀರುವುದರಿಂದ ನಿಷ್ಪಕ್ಷಪಾತವಾದ ತನಿಖೆ ಅಸಾಧ್ಯ’ ಎಂದು ತಿಳಿಸಿದರು.
‘ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಸಂಬಳ ತಿಂದು ಪ್ರಭಾವಿ ರಾಜಕಾರಣಿಗಳ ಪರ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ದ ಕೂಡ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇನೆ. ಇದು ದೇಶ ದ್ರೋಹದ ಕೆಲಸವಾಗಿದೆ. ಇದನ್ನು ರಾಜ್ಯದ ಜನರು ತಿಳಿಯಬೇಕು. ನ್ಯಾಯಾಲಯ ಈ ಪ್ರಕರಣವನ್ನು ಖಂಡಿತವಾಗಿಯೂ ಸಿಬಿಐಗೆ ನೀಡುವ ಭರವಸೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.