ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖದಲ್ಲಿ ನಗು ಬೀರುತ್ತಾ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಭಾವುಕ ಕ್ಷಣದಲ್ಲಿ, ಮುಂದಿನ ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಉಪಾಹಾರ ಕೂಟ ಏರ್ಪಡಿಸಿದ್ದರು. ಹಲವು ಸಚಿವರು ಈ ಸಭೆಯಲ್ಲಿ ಭಾಗವಹಿಸಿದ್ದರು. ಸದ್ಯ ಸಿಎಂ ನಿವಾಸದಲ್ಲಿ ನಡೆದ ಉಪಾಹಾರ ಕೂಟ ಮುಕ್ತಾಯಗೊಂಡಿದ್ದು, ಈ ಬೆನ್ನಲ್ಲೇ ಸಿಎಂ, “ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.
ಇಂದು ಮಧ್ಯಾಹ್ನ 3.30 ಬಳಿಕ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವ ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಖಚಿತವಾಗುವ ಮುಂಚಿನಿಂದಲೇ ಇತ್ತ ಡಿಕೆಶಿ ನಿವಾಸದ ಬಳಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡುತ್ತಿದ್ದು, ಸಿಹಿ ಹಂಚಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಮುಂದಿನ ಮುಖ್ಯಮಂತ್ರಿಯಾಗಿ ಯಾರೇ ಆಯ್ಕೆಯಾದರೂ ಅವರಿಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ ಎಂದು ಸಿದ್ದು ಹೇಳಿದ್ದಾರೆ. ಅವರು ಇಂದು ತಡರಾತ್ರಿ ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖರನ್ನು ಭೇಟಿಯಾಗುವ ನಿರೀಕ್ಷೆಯಿದೆ. ಆದರೆ, ಇದೆಲ್ಲವೂ ರಾಜ್ಯಪಾಲರ ಹಿಂತಿರುವಿಕೆಯ ಮೇಲೆ ಅವಲಂಬಿತವಾಗಿದೆ ಎನ್ನಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿನ್ನೆ ತಡ ರಾತ್ರಿ ಇಂಧೋರ್ಗೆ ತೆರಳಿದ್ದರು. ಅವರು ಇಂದು ಹಿಂತಿರುಗಿದ ಬಳಿಕ ಸಿಎಂ ರಾಜೀನಾಮೆ ಅಂಗೀಕರಿಸಬೇಕಿದೆ.




