ಮುಂಗಾರು ಚುರುಕಾಗುತ್ತಿದ್ದಂತೆ ರಾಜ್ಯದಲ್ಲಿ ಮಳೆ ಅಬ್ಬರ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 25ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಭಾಗ ಸೇರಿ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದೆ.
ಪ್ರಮುಖವಾಗಿ ಜೂನ್ 21ರಿಂದ ಜೂನ್ 25 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಭಾರತೀಯ ಹವಾಮಾನ ಇಲಾಖೆ ಕಳವಳ
ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಜೂನ್ 22 ಮತ್ತು 23ರಂದು ಗುಡುಗು, ಮಿಂಚು ಹಾಗೂ ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
This video cannot be played in your browser. Open the video directly

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ, ದಕ್ಷಿಣ ಒಳನಾಡಿನ ಮೈಸೂರು, ಚಿತ್ರದುರ್ಗ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಜೂನ್ 22ರಿಂದ 25ರವರೆಗೆ ಗಾಳಿಯ ವೇಗ ಹೆಚ್ಚಿರಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಐಎಂಡಿ ಎಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ಭೂಕುಸಿತದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.





