ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ರೂಪಿಸಲು ನಿರ್ಧರಿಸಿವೆ. SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಮಿತ್ರಪಕ್ಷಗಳು, ಈ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ ನಡೆಸಲು ಮುಂದಾಗಿವೆ.
ಈ ಕುರಿತು X ನಲ್ಲಿ ಪೋಸ್ಟ್ನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ರಾಜ್ಯಮಟ್ಟದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಸಿಪಿಎಂ, ಸಿಪಿಐ, ಸಿಪಿಐ(ಎಂಎಲ್) ಲಿಬರೇಷನ್, ಸಮಾಜವಾದಿ ಪಕ್ಷ ಹಾಗೂ ಫಾರ್ವರ್ಡ್ ಬ್ಲಾಕ್ ಪಕ್ಷಗಳ ರಾಜ್ಯ ನಾಯಕರು ಸಭೆಯಲ್ಲಿ ಭಾಗವಹಿಸಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.
ಎಸ್ಐಆರ್ ಪ್ರಕ್ರಿಯೆಯಿಂದ ನೈಜ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಮಿತ್ರಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ನಾಯಕರು, ಇಂತಹ ಕ್ರಮಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವ ಅಗತ್ಯವಿದೆ. ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು, ಮತದಾರರ ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರನ್ನು ಮರುಸೇರ್ಪಡೆಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಗಳನ್ನು ಮಿತ್ರಪಕ್ಷಗಳು ಮುಂದಿಟ್ಟಿವೆ.
ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ನಡುವೆ ಸಮನ್ವಯ ಹೆಚ್ಚಿಸಲು ರಾಜ್ಯಮಟ್ಟದ ಸಮನ್ವಯ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಸಮಿತಿಯ ಮೂಲಕ ವಿವಿಧ ಪಕ್ಷಗಳ ಹೋರಾಟಗಳನ್ನು ಸಂಘಟಿಸಿ, ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ತೀವ್ರಗೊಳಿಸುವ ಉದ್ದೇಶ ಹೊಂದಲಾಗಿದೆ. ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲಿಯೂ ಜನಾಂದೋಲನ ರೂಪಿಸಲು ಮಿತ್ರಪಕ್ಷಗಳು ಯೋಜಿಸಿವೆ. ಮತದಾರರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಎಸ್ಐಆರ್ ಪ್ರಕ್ರಿಯೆಯ ವಿರುದ್ಧ ಜನರನ್ನು ಸಂಘಟಿಸುವುದಕ್ಕೂ ಒತ್ತು ನೀಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!
ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ಭಾಗವಹಿಸಲಿವೆ ಎಂದು ಸಭೆಯಲ್ಲಿ ತಿಳಿಸಲಾಗಿದೆ. ದೆಹಲಿಯ ಪ್ರತಿಭಟನೆಯ ಬಳಿಕ ಕರ್ನಾಟಕದಲ್ಲಿಯೂ ಹೋರಾಟವನ್ನು ಮತ್ತಷ್ಟು ವಿಸ್ತರಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿಯವರು, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಮಂಜಪ್ಪ ಯಾದವ್ ಸೇರಿದಂತೆ ಸಿಪಿಐ(ಎಂಎಲ್) ಲಿಬರೇಷನ್, ಫಾರ್ವರ್ಡ್ ಬ್ಲಾಕ್ ಹಾಗೂ ಇಂಡಿಯಾ ಮೈತ್ರಿಕೂಟದ ವಿವಿಧ ಮಿತ್ರಪಕ್ಷಗಳ ನಾಯಕರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.





