ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ಹಗರಣ ನಡೆಸಿರುವುದಲ್ಲ, ಅದು ಸಾಮೂಹಿಕ ಅತ್ಯಾಚಾರ ಎಂದು ಹೇಳಿಕೆ ನೀಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಅನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
2024ರ ಮೇ 2ರಂದು ಲೋಕಸಭೆ ಚುನಾವಣಾ ಪ್ರಚಾರ ನಡೆಸಿದ್ದ ರಾಹುಲ್ ಗಾಂಧಿ ಅವರು ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರ ಮಾಡಿ, ಅದರ ವಿಡಿಯೋ ಮಾಡಿದ್ದಾರೆ ಎಂದು ಹೇಳಿದ್ದರು.
ಈ ಹೇಳಿಕೆಯ ವಿರುದ್ಧವಾಗಿ ಆಲ್ ಇಂಡಿಯಾ ದಲಿತ ಆಕ್ಷನ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ ನಾ ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಕರ್ನಾಟಕ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದಾರೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಪಿಐಎಲ್
ರಾಹುಲ್ ಗಾಂಧಿ ದ್ವೇಷ ಭಾಷಣ ಮಾಡಿ ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ, “ನಾನು ಈ ಹೇಳಿಕೆಯ ಅರ್ಹತೆ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಇದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಅಡಿಯಲ್ಲಿ ಬರುವ ವಿಷಯವಲ್ಲ ಎಂದು ನಾವು ಹೇಳುತ್ತೇವೆ” ಎಂದು ತಿಳಿಸಿದ್ದಾರೆ. ಜೊತೆಗೆ ಪೀಠವು ಅರ್ಜಿದಾರರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ.
