ಕರ್ನಾಟಕ ರಾಜ್ಯ ಸರ್ಕಾರ ಆಳಂದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ. ‘ಗಿರೀಶ್ ಭಾರದ್ವಾಜ್ vs ಕರ್ನಾಟಕ ರಾಜ್ಯ’ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ.
ಪ್ರಕರಣಗಳನ್ನು ಹಿಂಪಡೆಯಲು ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 321ನ್ನು ಬಳಸುವಾಗ ರಾಜ್ಯ ಸರ್ಕಾರವು ನಿಯಮಗಳನ್ನು ಪಾಲಿಸಿಲ್ಲ ಎಂದು ಹೈಕೋರ್ಟ್ ತನ್ನ ಪ್ರಾಥಮಿಕ ಅಭಿಪ್ರಾಯದಲ್ಲಿ ತಿಳಿಸಿದೆ. ಈ ಹಿಂದೆ ಮೊಕದ್ದಮೆಗಳನ್ನು ಹಿಂಪಡೆಯುವಾಗ ಸೂಕ್ತ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಬೇಕೆಂದು ನ್ಯಾಯಾಲಯವು ನಿರ್ದೇಶನ ನೀಡಿತ್ತು. ಆದರೆ, ಸರ್ಕಾರದ ಈ ನಿರ್ಧಾರವು ಆ ಆದೇಶದ ಉಲ್ಲಂಘನೆಯಾಗಿದೆ ಎಂದು ನ್ಯಾಯಪೀಠವು ಗಮನ ಸೆಳೆದಿದೆ.
ಇದನ್ನೂ ಓದಿ: ಭೂಕಂಪದ ಅವಶೇಷಗಳಡಿ ಮನುಷ್ಯ ಎಷ್ಟು ಕಾಲ ಬದುಕಬಲ್ಲ?
ಏನಿದು ಆಳಂದ ಗಲಭೆ ಪ್ರಕರಣ?
2022ರ ಮಹಾಶಿವರಾತ್ರಿಯಂದು ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಸಂಬಂಧಿಸಿದಂತೆ ಭಾರಿ ಕೋಮು ಗಲಭೆ ನಡೆದಿತ್ತು. ಈ ವೇಳೆ ಉಭಯ ಕೋಮುಗಳ ನಡುವೆ ಕಲ್ಲು ತೂರಾಟ ನಡೆದು, ಪೊಲೀಸರ ಮೇಲಿನ ಹಲ್ಲೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿತ್ತು. ಗಲಭೆ ಸಂಬಂಧ ಒಟ್ಟು 13 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿತ್ತು. ಇದಕ್ಕೆ ಬಿಜಿಪೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.




