ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಹಾಜರಾಗುವ ಸ್ಪರ್ಧಾತ್ಮಕ ಪರೀಕ್ಷೆಗಳು ಇನ್ನು ಮುಂದೆ ‘ಕಾಗದ ರಹಿತ’ ವಾಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ನೇತೃತ್ವದಲ್ಲಿ ಗುರುವಾರ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಯನಾಡಿಗಾದದ್ದು ನಮ್ಮಲ್ಲೂ ಆಗಬಹುದಲ್ಲವೇ?
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಲ್ಲಿ ಪಾರದರ್ಶಕತೆ ತರಲು ಇಂತಹ ನಿರ್ಧಾರ ಕೈಗೊಳ್ಳಲಾಗಿದ್ದು, 20 ಸಾವಿರಕ್ಕಿಂತ ಕಡಿಮೆ ಅಭ್ಯರ್ಥಿಗಳು ಇರುವ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಧಾರಿತ ಪರೀಕ್ಷೆಗಳನ್ನು ಕಂಪ್ಯೂಟರ್ ಮೂಲಕ ನಡೆಸುವುದನ್ನು ಕಡ್ಡಾಯಗೊಳಿಸಲಾಗುತ್ತದೆ. ಹಂತಹಂತವಾಗಿ ಉಳಿದ ಎಲ್ಲ ಪರೀಕ್ಷೆಗಳನ್ನೂ ‘ಕಾಗದ ರಹಿತ’ವಾಗಿ ನಡೆಸಲು ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿದೆ.
ಆಧುನಿಕ ತಂತ್ರಜ್ಞಾನ ಬಳಕೆಗೆ 10 ಕೋಟಿ ರೂ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಜೊತೆಗೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಸಿಕೊಂಡು ವೆಬ್ ಕಾಸ್ಟಿಂಗ್ ಮಾಡಲು ಸಭೆ ಅನುಮೋದನೆ ನೀಡಿತು. ಅದಕ್ಕಾಗಿ 10 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲು ಸಮ್ಮತಿ ನೀಡಿದೆ. ಮುಂದಿನ ಎಲ್ಲ ಪರೀಕ್ಷೆಗಳಲ್ಲಿ ಪ್ರತಿ ಪರೀಕ್ಷಾ ಕೊಠಡಿಗಳಲ್ಲೂ ಅತ್ಯಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.
