ಪ್ರೀತಿಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಏ.24ರಂದು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.
ಅರ್ಜಿದಾರ ಆರೋಪಿ ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಯಗಳಿಗೆ ನ್ಯಾಯಾಲಯ ತಡೆ ನೀಡಿದೆ.
ಇದನ್ನೂ ಓದಿ : ಮತದಾನದ ಹಕ್ಕನ್ನು ತರಿದು ಹಾಕುವ ಹುನ್ನಾರದ ವಿರುದ್ಧದ ‘ಪ್ರತೀಕಾರ’ವೇ ಮತ ಪ್ರಮಾಣದ ಏರಿಕೆಗೆ ಕಾರಣ?
ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣವನ್ನು ರದ್ದು ಮಾಡಬೇಕೆಂದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿದೆ.
ಮುಂದಿನ ಒಂದು ವಾರದ ಒಳಗೆ ಸಂತ್ರಸ್ತೆಗೆ 75 ಸಾವಿರ ರೂ.ಗಳನ್ನು ಅರ್ಜಿದಾರರು ಪಾವತಿಸಬೇಕು. ಬಳಿಕ ಪ್ರತಿ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.





