ರಾಜ್ಯ ರಾಜಕಾರಣದಲ್ಲಿ ಆಗ್ಗಾಗ್ಗೆ ಸದ್ದು ಮಾಡುತ್ತಿರುವ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ವಿಚಾರ ಈಗ, ಉಪಚುನಾವಣೆ ಸಮಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ. ಅಧಿಕಾರ ಬದಲಾವಣೆಯಂತಹ ವಿಷಯಗಳಲ್ಲಿ ನನ್ನ ಮತ್ತು ಮುಖ್ಯಮಂತ್ರಿಗಳ ಹೇಳಿಕೆ ಹೊರತಾಗಿ ಬೇರೆಯವರು ನೀಡುವ ಯಾವುದೇ ಹೇಳಿಕೆಗಳು ಗೌಣ” ಎಂದು ಹೇಳಿದ್ದಾರೆ.
ಇತ್ತೀಚೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಅಧಿಕಾರದಲ್ಲಿ ಇರುತ್ತಾರೆ ಎಂದು ಸಚಿವ ಪರಮೇಶ್ವರ್ ಹೇಳಿದ್ದರು. ಅವರ ಹೇಳಿಕೆ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, “ನಾನು ಬೇರೆಯವರ ವೈಯಕ್ತಿಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದಿದ್ದಾರೆ.
“ನಾಯಕತ್ವ ಬದಲಾವಣೆಯ ವಿಚಾರವಾಗಿ ನೀವು (ಸುದ್ದಿಗಾರರು) ತಲೆಕೆಡಿಸಿಕೊಳ್ಳುವ ಅಥವಾ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ” ಎಂದು ಹೇಳಿದ್ದಾರೆ.
ಉಪಚುನಾವಣೆಯ ಕುರಿತು ಮಾತನಾಡಿದ ಡಿಸಿಎಂ, “ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡಿವೆ. ಪ್ರಸ್ತುತ ಎದುರಾಗಿರುವ ಬೆಲೆ ಏರಿಕೆಯ ಬಗ್ಗೆ ಬಿಜೆಪಿ ಮೌನವಾಗಿದೆ ಮತ್ತು ಕೇಂದ್ರ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ನಮ್ಮ ಗೆಲುವು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



