ಮುಂದಿನ 5 ದಿನಗಳು ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 26 ಮತ್ತು 27ರಂದು ಅತಿಯಾದ ಮಳೆಯಾಗುವ ನಿರೀಕ್ಷೆಯಿದೆ. ಅಂತೆಯೇ ಒಳನಾಡು ಜಿಲ್ಲೆಗಳಲ್ಲೂ ಜೂನ್ 26 ಹಾಗೂ 27ರಂದು ಕೆಲವು ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಮತ್ತು ಕೆಎಸ್‌ಎನ್‌ಡಿಎಂಸಿ ನೀಡಿರುವ ಪ್ರಮುಖ ಮುನ್ಸೂಚನೆಗಳು ಹಾಗೂ ಮುಂಜಾಗ್ರತಾ ಕ್ರಮಗಳು ಪ್ರಕಾರ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಒಳನಾಡು ಮತ್ತು ಮಲೆನಾಡು ಹಾಗೂ ದಕ್ಷಿಣ-ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಸಾಧಾರಣ ಮಳೆಯಾಗಲಿದೆ. ಜೂನ್ 26 ಮತ್ತು 27 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಪರಿಗಣಿಸಿ ಅಗತ್ಯ ಮುಂಜಾಗ್ರತೆ ವಹಿಸಬೇಕು.
ಇದನ್ನೂ ಓದಿದ್ದೀರಾ? ದಾಖಲೆ ಮೀನು ಉತ್ಪಾದನೆಯಾದರೂ… ಸುಧಾರಿಸದ ಮೀನುಗಾರರ ಬದುಕು
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ತಂಪಾದ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




