ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ 7 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾಸನ, ಮೈಸೂರು, ಚಾಮರಾಜನಗರ ಹಾಗೂ ಬೀದರ್ ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ ಮತ್ತು ಕಾನೂನು ಮಾಪನಶಾಸ್ತ್ರ (ತೂಕ ಮತ್ತು ಅಳತೆ) ಇಲಾಖೆಯ ನಿರೀಕ್ಷಕ ಎಸ್.ಟಿ. ವೆಂಕಟೇಶಪ್ಪ ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ಮತ್ತು ಡಿವೈಎಸ್‌ಪಿ ಕಲಾವತಿ ನೇತೃತ್ವದ ತಂಡ ದಾಳಿ ನಡೆಸಿದೆ. ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ‘ಪ್ರಸಾದ’ ನಿವಾಸ ಮತ್ತು ಅವರಿಗೆ ಸೇರಿದ ಅಕ್ಷಯ ಗ್ಲೋಬಲ್ ಆಸ್ಪತ್ರೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಂತೆಯೇ, ಚಿತ್ರದುರ್ಗದ ವಿದ್ಯಾನಗರದಲ್ಲಿರುವ ಇನ್ಸ್‌ಪೆಕ್ಟರ್ ವೆಂಕಟೇಶ್ ಅವರ ಮನೆ ಮತ್ತು ಅವರಿಗೆ ಸೇರಿದ ‘ಮಹಾಲಕ್ಷ್ಮಿ’ ನಿವಾಸದ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ.
ಧಾರವಾಡದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್ ಚಾಲಕ ಮತ್ತು ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಷಡಕ್ಷರಯ್ಯ ಅವರ ಹುಬ್ಬಳ್ಳಿಯ ಗಾಂಧಿನಗರದ ನಿವಾಸದ ಮೇಲೆ ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿ ಆಸ್ತಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಬೀದರ್‌ನಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (BRIMS) ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜಕುಮಾರ್ ಮಾಳಗೆ ಅವರಿಗೆ ಸೇರಿದ ಗುರುನಗರದ ನಿವಾಸ ಮತ್ತು ಕಚೇರಿ ಮೇಲೆ ಡಿವೈಎಸ್‌ಪಿ ಹನುಮಂತರಾಯ ಅವರ ತಂಡ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದೆ.
ಇನ್ನುಳಿದಂತೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಸಂಜೀವಪ್ಪ, ಹಾಸನ ಜಿಲ್ಲೆಯ ಸಕಲೇಶಪುರದ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಹಾಗೂ ಮೈಸೂರು-ಚಾಮರಾಜನಗರ ಭಾಗದಲ್ಲಿ ಮೊಬೈಲ್ ಸ್ಕ್ವಾಡ್‌ಗೆ ನಿಯೋಜಿತರಾಗಿರುವ ವಲಯ ಅರಣ್ಯಾಧಿಕಾರಿ ಸುರೇಂದ್ರ ಕುಮಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಲೋಕಾಯುಕ್ತ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ದಾಳಿಯ ವೇಳೆ ಪತ್ತೆಯಾದ ಒಟ್ಟು ಆಸ್ತಿಪಾಸ್ತಿಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.


