ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆಗಸ್ಟ್ 31 ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಆಗಸ್ಟ್ 28 ಗುರುವಾರ ಕೂಡಾ ಅತಿ ಭಾರೀ ಮಳೆಯ ಹಿನ್ನೆಲೆ ಮೂರೂ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಅದೇ ರೀತಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಮಳೆ
ಇಂದು (ಆಗಸ್ಟ್ 27) ಗಣೇಶ ಹಬ್ಬದಂದೇ ಮಳೆ ಅಬ್ಬರಿಸಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಹಗುರ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.