ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಉತ್ತರಿಸಿದರು.
‘ನೋಡಿ, ಅದು ಹೈಕಮಾಂಡ್ ಕೈಯಲ್ಲಿದೆ. ಹೈಕಮಾಂಡ್‌ನಲ್ಲಿ ಏನು ನಡೆಯುತ್ತಿದೆ ಎಂದು ಇಲ್ಲಿ ಯಾರೂ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್‌ಗೆ ಬಿಟ್ಟ ವಿಷಯ ಮತ್ತು ಮುಂದಿನ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್‌ಗೆ ಇದೆ. ಆದರೆ, ಅನಗತ್ಯವಾಗಿ ಯಾರೊಬ್ಬರೂ ಸಮಸ್ಯೆ ಸೃಷ್ಟಿಸಬಾರದು’ ಎಂದು ಅವರು ತಿಳಿಸಿದರು.
2023ರಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡಾಗ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಮಾತುಕತೆ ನಡೆದಿದ್ದು, ಉಭಯ ನಾಯಕರು ತಲಾ 2.5 ವರ್ಷಗಳ ಕಾಲ ರಾಜ್ಯವನ್ನು ಮುನ್ನಡೆಸುತ್ತಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಆದರೆ, ಈ ಬಗ್ಗೆ ಪಕ್ಷ ಯಾವುದೇ ಸ್ಪಷ್ಟನೆ ನೀಡಿಲ್ಲ ಅಥವಾ ತಿರಸ್ಕರಿಸಿಲ್ಲ. ಸದ್ಯ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ
ಇದೇ ಸಂದರ್ಭದಲ್ಲಿ ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ ಹೊಸಬಾಳೆ ಅವರ ಬಗ್ಗೆ ಮಾತನಾಡಿದ ಖರ್ಗೆ, ಆತ ಮನುಸ್ಮೃತಿಯ ವ್ಯಕ್ತಿ. ಬಡವರ್ಗದ ಜನರು ಏಳಿಗೆ ಹೊಂದುವುದು ಅವರಿಗೆ ಇಷ್ಟವಿಲ್ಲ. ಸಾವಿರ ವರ್ಷಗಳಿಗೂ ಹೆಚ್ಚು ಕಾಲ ಪಾಲಿಸಿಕೊಂಡು ಬಂದಿರುವುದನ್ನು ಅವರು ಇನ್ನೂ ಮುಂದುವರಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ಸಮಾಜವಾದ, ಜಾತ್ಯತೀತತೆ, ಒಕ್ಕೂಟ ವ್ಯವಸ್ಥೆ, ಸ್ವಾತಂತ್ರ‍್ಯ, ಸಮಾನತೆ ಅಥವಾ ಭ್ರಾತೃತ್ವದಲ್ಲಿ ನಂಬಿಕೆ ಇಡುವುದಿಲ್ಲ. ಎಲ್ಲ ಮೌಲ್ಯಗಳನ್ನು ತಿರಸ್ಕರಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇದು ಅವರ ಪಕ್ಷದ ಮಾರ್ಗ, ಆರ್‌ಎಸ್‌ಎಸ್ ಮಾರ್ಗಕ್ಕೆ ನಿಜವಾಗಿಯೂ ಬದ್ಧರಾಗಿದ್ದರೆ, ಅವರು ಅಸ್ಪೃಶ್ಯತೆಯನ್ನು ತೊಡೆದು ಹಾಕುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.