ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.