ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರ ವಿರುದ್ಧ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ಕಾಂಗ್ರೆಸ್ ಶಿಸ್ತಿನ ಪಕ್ಷ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ತೀರ್ಮಾನವನ್ನು ಸಮರ್ಥಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದರು. ಆಗ ಏಕೆ ಕ್ರಮ ಕೈಗೊಂಡಿರಲಿಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ತಡವರಿಸಿದರು.
ದೇಶದಲ್ಲಿ ಇಂಡಿಯಾ ಒಕ್ಕೂಟದವರನ್ನು ಮಹಿಳಾ ವಿರೋಧಿಗಳೆಂದು ಬಿಂಬಿಸುವ ಷಡ್ಯಂತ್ರ ನಡೆಯುತ್ತಿದೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಿಳಾ ಮೀಸಲಾತಿ ವಿಚಾರ ತರಾತುರಿಯಲ್ಲಿ ಮುನ್ನೆಲೆಗೆ ಬಂದಿದೆ. ಕ್ಷೇತ್ರ ಪುನರ್‌ವಿಂಗಡಣೆಯಿಂದ ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆಯಾಗುವ ಆತಂಕವಿದೆ. ಉತ್ತರ ಭಾರತದಲ್ಲಿ ಹೆಚ್ಚು ಸೀಟ್ಗಳನ್ನು ಬಿಜೆಪಿ ಪಡೆಯಲಿದೆ. ಆದ್ದರಿಂದ ವಿರೋಧಿಸಿದೆವು ಎಂದರು.
ಮಹಿಳೆಯರನ್ನು ಮತ ಬ್ಯಾಂಕ್ ಆಗಿ ಬಳಸುವುದರ ಜೊತೆಗೆ ಭಾವನಾತ್ಮಕ ಪ್ರಚೋದನೆ ನೀಡುವುದನ್ನು ಬಿಜೆಪಿ ನಿಲ್ಲಿಸಬೇಕು. ಮಹಿಳಾ ಮೀಸಲಾತಿ ಮಸೂದೆ ಪಾಸ್ ಆದರೆ ಕ್ರೆಡಿಟ್ ತೆಗೆದುಕೊಳ್ಳುವುದು ಮತ್ತು ಸೋತರೆ ಇಂಡಿಯಾ ಒಕ್ಕೂಟದ ವಿರುದ್ಧ ಹರಿಹಾಯುವುದು ಎನ್ಡಿಎ ಸರ್ಕಾರದ ಉದ್ದೇಶವಾಗಿತ್ತು ಎಂದರು.





