ಮುಡಾ ಪ್ರಕರಣದಲ್ಲಿ ತನ್ನ ವಿರುದ್ದ ರಾಜ್ಯಪಾಲರು ತನಿಖೆಗೆ ಆದೇಶಿಸಿರುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇದೇ ನವೆಂಬರ್ 23ಕ್ಕೆ ವಿಚಾರಣೆ ನಡೆಸಲಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಜಾಗೊಳಿಸಿತ್ತು.
ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸಚಿವ ಜಮೀರ್ ಅಹಮದ್ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಸೂಚನೆ
ಈ ತೀರ್ಪನ್ನು ಪ್ರಶ್ನಿಸಿ ಸಿಎಂ ಪರ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಸಲ್ಲಿಸಿದ್ದು, ಈ ರಿಟ್ ಮೇನ್ಮನವಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಗುರುವಾರ ಬೆಳಿಗ್ಗೆ ಮನವಿ ಸಲ್ಲಿಸಿದರು.
ಈ ಮೇಲ್ಮನವಿಯನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 23ಕ್ಕೆ ನಿಗದಿಪಡಿಸಿದೆ.
