ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದೀಗ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ, “ಈ ಪ್ರಕರಣವನ್ನು ಮುಂದಿನ ತನಿಖೆ ಅಥವಾ ಮರು ತನಿಖೆಗಾಗಿ ಸಿಬಿಐಗೆ ವಹಿಸಲು ಸೂಚಿಸುವ ಯಾವುದೇ ರೀತಿಯ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದೆ.
ತೀರ್ಪು ಪ್ರಕಟವಾದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, “ಲೋಕಾಯುಕ್ತ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ತನಿಖೆಗೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಹೈಕೋರ್ಟ್ ಆದೇಶದ ಪ್ರತಿ ಇನ್ನು ದೊರೆತಿಲ್ಲ. ಪ್ರತಿ ದೊರೆತ ಬಳಿಕ, ಅದನ್ನು ಪರಿಶೀಲಿಸಿ, ನಂತರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.