ರಾಜ್ಯದಲ್ಲಿ ಮಳೆ-ಗಾಳಿಯಿಂದ ಉಂಟಾಗಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ನಿಭಾಯಿಸುವ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿಗಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮುಖ 13 ಮಂದಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಇಂದು(ಜೂನ್ 24) ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ರಾಜ್ಯಪಾಲರ ಆದೇಶಾನುಸಾರ ಸರ್ಕಾರದ ಉಪ ಕಾರ್ಯದರ್ಶಿ (ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಈ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ನೇಮಕಾತಿ ಚಾಲ್ತಿಯಲ್ಲಿರುತ್ತದೆ. ಯಾವುದೇ ಪ್ರಕೃತಿ ವಿಕೋಪ ಸಂಭವಿಸಿದಾಗ ತ್ವರಿತಗತಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಈ ಹಂಚಿಕೆ ಮಾಡಲಾಗಿದೆ.
ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಹೊಣೆ ನೀಡಲಾಗಿದೆ. ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ. ಅದೇ ರೀತಿ, ಎಂ.ಬಿ. ಪಾಟೀಲ್ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
ಇದನ್ನು ಓದಿದ್ದೀರಾ? ಫಿಫಾ 2026: ಚಿನ್ನದ ಬೂಟಿಗಾಗಿ ಮೆಸ್ಸಿ, ಮ್ಬಾಪೆ, ಹಾಲಾಂಡ್ ನಡುವೆ ಜಿದ್ದಾಜಿದ್ದಿನ ಪೈಪೋಟಿ
This video cannot be played in your browser. Open the video directly
ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ನೀಡಲಾಗಿದ್ದು, ಕೃಷ್ಣ ಬೈರೇಗೌಡರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ. ಈಶ್ವರ್ ಖಂಡ್ರೆ ಅವರು ಬೀದರ್ ಮತ್ತು ಗದಗ್ ಜಿಲ್ಲೆಗಳ ಉಸ್ತುವಾರಿ ವಹಿಸಲಿದ್ದು, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳನ್ನು ಪ್ರಿಯಾಂಕ್ ಖರ್ಗೆ ಅವರಿಗೆ ಹಾಗೂ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳನ್ನು ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ಹಂಚಿಕೆ ಮಾಡಲಾಗಿದೆ. ಮಳೆಗಾಲದಲ್ಲಿ ಹೆಚ್ಚು ಹಾನಿಗೊಳಗಾಗುವ ಕರಾವಳಿ ಮತ್ತು ಮಲೆನಾಡು ಭಾಗದ ಉಡುಪಿ, ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುದೊಡ್ಡ ಹೊಣೆಯನ್ನು ಯು.ಟಿ. ಖಾದರ್ ಫರೀದ್ ಅವರಿಗೆ ನೀಡಲಾಗಿದೆ. ಇನ್ನು, ಬೈರತಿ ಸುರೇಶ್ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ, ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವಿಕೋಪ ನಿರ್ವಹಣೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.





