ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 12 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರಿಗೆ ಎರಡು ಸಾವಿರ ರೂಪಾಯಿ ಗೌರವಧನ ಹೆಚ್ಚಿಸುವುದಾಗಿ ರಾಜ್ಯ ಸರ್ಕಾರದ ಭರವಸೆ ನೀಡಿದೆ. ಆದರೆ ಇದಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುರಿಸಲು ನಿರ್ಧಾರಿಸಿದ್ದಾರೆ.
ಗೃಹ ಕಚೇರಿಯಲ್ಲಿ ನಡೆದ ಸಂಧಾನ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಆಶಾ ಕಾರ್ಯಕರ್ತೆಯರಿಗೆ ಮಾಸಿಕ 2,000 ರೂಪಾಯಿ ಗೌರವಧನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಸ್ಪಷ್ಟಪಡಿಸಿದರು. ಹಾಗೆಯೇ ಆಶಾ ಕಾರ್ಯಕರ್ತೆಯರು ಹೋರಾಟ ಕೈಬಿಡುವುದಾಗಿ ವರದಿಯಾಗಿತ್ತು.
ಇದನ್ನೂ ಓದಿ: BREAKING NEWS | ಗೌರವ ಧನ ₹2,000 ಹೆಚ್ಚಳಕ್ಕೆ ಸರ್ಕಾರ ಭರವಸೆ: ಪ್ರತಿಭಟನೆ ಹಿಂಪಡೆದ ಆಶಾ ಕಾರ್ಯಕರ್ತೆಯರು
ಆದರೆ ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ಮುಂದುವರೆಯುತ್ತಿದೆ ಎಂದು ಸ್ಪಷ್ಟಪಡಿಸಿದೆ.
ಹಾಗೆಯೇ, ಮುಖ್ಯಮಂತ್ರಿಗಳ ಸಂಧಾನ ಸಭೆಯ ತೀರ್ಮಾನಗಳಿಗೆ ಆಶಾ ಕಾರ್ಯಕರ್ತೆಯರು ಒಪ್ಪದ ಕಾರಣ ಸಂಘಟನೆಯ ಮುಖಂಡರು ಹಾಗೂ ಆಶಾ ಕಾರ್ಯಕರ್ತೆಯರು ಹೋರಾಟವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದೆ.
ಪ್ರಸ್ತುತ ನೀಡುತ್ತಿರುವ ಕಡಿಮೆ ಗೌರವಧನದಲ್ಲಿ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದ್ದು, ತಕ್ಷಣವೇ ಮಾಸಿಕ ₹15,000 ನಿಶ್ಚಿತ ಗೌರವಧನ ಘೋಷಿಸಬೇಕು, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು, ನಿವೃತ್ತಿ ಹೊಂದಿದವರಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ₹5 ಲಕ್ಷ ಇಡಿಗಂಟು ನೀಡಬೇಕು ಹಾಗೂ ಬಲವಂತದ ಮೊಬೈಲ್ ಆ್ಯಪ್ ಕೆಲಸಕ್ಕೆ ಪ್ರತ್ಯೇಕ ಸೌಲಭ್ಯ ಒದಗಿಸಬೇಕು ಎಂಬುದು ಸಂಘಟನೆಯ ಪ್ರಮುಖ ಬೇಡಿಕೆಗಳಾಗಿವೆ. ಸರ್ಕಾರ ಸ್ಪಂದಿಸದಿದ್ದರೆ ಮುಂಬರುವ ಅಧಿವೇಶನದವರೆಗೂ ಹೋರಾಟವನ್ನು ತೀವ್ರಗೊಳಿಸುವುದಾಗಿ ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



