ಸದ್ಯ ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಮತಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿರುವ ಆತಂಕವಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ‘ನಮ್ಮ ಮತ ನಮ್ಮ ಹಕ್ಕು, ನಮ್ಮ ಮತ ನಮ್ಮ ಬದುಕು’ ಎಂಬ ಅರಿವಿನೊಂದಿಗೆ ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ರಕ್ಷಿಸಿಕೊಳ್ಳಲು ಒಗ್ಗಟ್ಟಿನಿಂದ ನಿಲ್ಲಬೇಕು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು.
ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಅತ್ಯಂತ ಅಮೂಲ್ಯವಾದ ಹಕ್ಕು ಮತದಾನದ ಹಕ್ಕು. ಪ್ರಧಾನಿಯ ಮತಕ್ಕೆ ಎಷ್ಟು ಮೌಲ್ಯವಿದೆಯೋ, ಒಬ್ಬ ಸಾಮಾನ್ಯ ನಾಗರಿಕನ ಮತಕ್ಕೂ ಅಷ್ಟೇ ಮೌಲ್ಯವಿದೆ. ಶ್ರೀಮಂತ-ಬಡವ ಎಂಬ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಮತದಾನದ ಹಕ್ಕು ನೀಡಿರುವುದು ಪ್ರಜಾಪ್ರಭುತ್ವದ ಶ್ರೇಷ್ಠತೆ ಎಂದು ಹೇಳಿದರು.
ಇದನ್ನೂ ಓದಿ: ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಿಎಂ ಡಿ ಕೆ ಶಿವಕುಮಾರ್
ಸಂವಿಧಾನದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುವ ಪ್ರಯತ್ನಗಳನ್ನು ದೇಶ ಗಮನಿಸುತ್ತಿದೆ. ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಪ್ರಯತ್ನ ನಡೆದರೆ ಅದು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ತಂದಂತೆ. ವ್ಯಕ್ತಿ ಪೂಜೆಗಿಂತ ಪ್ರಜಾಪ್ರಭುತ್ವದ ರಕ್ಷಣೆ ಮುಖ್ಯ. ಸಂವಿಧಾನ ಉಳಿದರೆ ದೇಶದ ಐಕ್ಯತೆ, ಸಮಗ್ರತೆ ಮತ್ತು ಶಾಂತಿ ಉಳಿಯಲಿದೆ” ಎಂದು ತಿಳಿಸಿದರು.
ಐದು ಗ್ಯಾರಂಟಿಗಳೂ ಸಾಮಾಜಿಕ ನ್ಯಾಯದ ಭಾಗ
“ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕುವ ಅವಕಾಶ, ಗೌರವ ಮತ್ತು ಆರ್ಥಿಕ ಭದ್ರತೆ ಸಿಗಬೇಕು. ಇದೇ ಉದ್ದೇಶದಿಂದ ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಭೂಮಿ ಗ್ಯಾರಂಟಿ ಯೋಜನೆಯೂ ಇದೇ ಆಶಯದ ಭಾಗವಾಗಿದೆ. ಬಡವರು, ರೈತರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಬದುಕಿನಲ್ಲಿ ಬದಲಾವಣೆ ತರುವುದೇ ಸರಕಾರದ ಉದ್ದೇಶ. ಎಲ್ಲರಿಗೂ ಸಮಬಾಳು, ಸಮಾನ ಅವಕಾಶ ಕಲ್ಪಿಸುವುದಕ್ಕೆ ಸರಕಾರ ಬದ್ಧವಾಗಿದೆ” ಎಂದು ಹೇಳಿದರು.
“ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ ಅದನ್ನು ಜಾರಿಗೊಳಿಸುವವರ ಮೇಲೆ ಅದರ ಯಶಸ್ಸು ಅವಲಂಬಿತವಾಗಿರುತ್ತದೆ ಎಂಬ ಡಾ.ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತನ್ನು ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದರು.
“ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಕೇವಲ ಸರಕಾರದ ಮೇಲಷ್ಟೇ ಇಲ್ಲ. ಪ್ರತಿಯೊಬ್ಬ ಭಾರತೀಯನ ಮೇಲೂ ಇದೆ. ಸ್ವಾತಂತ್ರ್ಯ ಎಂದರೆ ಕೇವಲ ಆಳ್ವಿಕೆ ನಡೆಸುವುದಲ್ಲ. ಶತಮಾನಗಳಿಂದ ಅಸಮಾನತೆಯಿಂದ ಬಳಲುತ್ತಿರುವ ಸಮಾಜದಲ್ಲಿ ಪರಿವರ್ತನೆ ತರುವುದು ಅದರ ನಿಜವಾದ ಉದ್ದೇಶ. ಕರ್ನಾಟಕದ 12 ಮಂದಿ ಸಂವಿಧಾನ ರಚನೆಯ ಸಂದರ್ಭದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಹಿರಿಯರು ಸ್ಮರಿಸಿದ್ದಾರೆ. ಕೆ.ಸಿ.ರೆಡ್ಡಿ, ಎಸ್. ನಿಜಲಿಂಗಪ್ಪ ಹಾಗೂ ಕೆಂಗಲ್ ಹನುಮಂತಯ್ಯ ಸೇರಿದಂತೆ ರಾಜ್ಯದ ಮಹನೀಯರ ಕೊಡುಗೆ ಮಹತ್ವದ್ದಾಗಿದೆ” ಎಂದರು.
“ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತೀಯ ಸಂವಿಧಾನವನ್ನು ಪ್ರಶಂಸಿಸಿದ್ದನ್ನೂ, ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ ಅವರು ದೇಶದ ಸಂವಿಧಾನದಿಂದ ಸ್ಫೂರ್ತಿ ಪಡೆದಿದ್ದಾರೆ” ಎಂದು ತಿಳಿಸಿದರು.
ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕಾಂಗ್ರೆಸ್ ಕೊಡುಗೆ
“ಕಾಂಗ್ರೆಸ್ ಸರ್ಕಾರ ದೇಶಕ್ಕೆ ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ನೀಡಿದೆ. ವಿಶ್ವಮಾನವ ತತ್ವ ಮತ್ತು ಸಮಾನತೆಯ ಸಂದೇಶವನ್ನು ಸಾರಿದೆ. ಇವು ಕೇವಲ ದೇಶದ ಹೆಮ್ಮೆಯ ಸಂಕೇತಗಳಲ್ಲ. ಪ್ರತಿಯೊಬ್ಬ ಭಾರತೀಯನೂ ಗೌರವಿಸಿ, ಉಳಿಸಿ ಬೆಳೆಸಬೇಕಾದ ರಾಷ್ಟ್ರೀಯ ಮೌಲ್ಯಗಳು. ಈ ತತ್ವ, ಆದರ್ಶ ಮತ್ತು ಸಂದೇಶಗಳನ್ನು ಎಲ್ಲ ಸಂದರ್ಭಗಳಲ್ಲೂ ಪಾಲಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸಬೇಕು” ಎಂದು ಹೇಳಿದರು.
“ಜಾತಿ, ಧರ್ಮ, ಮೇಲು-ಕೀಳು ಎಂಬ ಭಾವನೆಗಳನ್ನು ಬದಿಗಿಟ್ಟು ನಾವೆಲ್ಲರೂ ಭಾರತೀಯರು ಎಂಬ ಒಗ್ಗಟ್ಟಿನ ಭಾವನೆಯಿಂದ ಬದುಕಬೇಕು. ಕನಕದಾಸರು, ಶಿಶುನಾಳ ಶರೀಫರು, ನಾರಾಯಣ ಗುರುಗಳು ಸೇರಿದಂತೆ ಅನೇಕ ಮಹನೀಯರು ಸಾರಿದ ಸಮಾನತೆ ಮತ್ತು ಮಾನವೀಯತೆಯ ಸಂದೇಶವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಮಾನವೀಯತೆಯೇ ನಮ್ಮ ಧರ್ಮವಾಗಬೇಕು. ಪ್ರತಿಯೊಬ್ಬರಿಗೂ ಸಮಾನ ಗೌರವ ಸಿಗುವ ಸಮಾಜ ನಿರ್ಮಾಣವಾಗಬೇಕು” ಎಂದು ತಿಳಿಸಿದರು.
“ಕಾಂಗ್ರೆಸ್ ಮತ್ತು ಸರ್ಕಾರ ಅಂಬೇಡ್ಕರ್ ಅವರ ಆಶಯದ ಹಾದಿಯನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಸಂವಿಧಾನ ನೀಡಿರುವ ಹಕ್ಕು, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ರಕ್ಷಿಸಲು ಬದ್ಧವಾಗಿದೆ. ರಾಜ್ಯವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿಚಾರದಲ್ಲಿ ಇಡೀ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು” ಎಂದು ಆಶಯ ವ್ಯಕ್ತಪಡಿಸಿದರು.



