ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್‌ನ ಉಚ್ಚಾಟಿತ ಸಂಸದ ಪ್ರಜ್ವಲ್ ರೇವಣ್ಣ ‘ಸಾಮೂಹಿಕ ಅತ್ಯಾಚಾರಿ’ ಎಂದು ಹೇಳಿಕೆ ನೀಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಈ ಪಿಐಎಲ್ ಅನ್ನು ಆಲ್ ಇಂಡಿಯಾ ದಲಿತ ಆಕ್ಷನ್ ಕಮಿಟಿಯು ರಾಷ್ಟ್ರೀಯ ಅಧ್ಯಕ್ಷ ಚಿ ನಾ ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ದ್ವೇಷ ಭಾಷಣ ಮಾಡಿ ಮಹಿಳೆಯರ ಘನತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಮತ್ತು ರಾಜ್ಯ ಮಹಿಳಾ ಆಯೋಗ, ರಾಜ್ಯ ಗೃಹ ಇಲಾಖೆ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಇದನ್ನು ಓದಿದ್ದೀರಾ? ಪ್ರಜ್ವಲ್ ಲೈಂಗಿಕ ದೌರ್ಜನ್ಯ ಹಗರಣ | ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
ರಾಹುಲ್ ಗಾಂಧಿ ಅವರು ಮಹಿಳೆಯರಿಗೆ ಅವಮಾನ ಮಾಡಿ ಭಾಷಣ ಮಾಡಿದ ಕಾರಣ ಬೇಷರತ್ ಕ್ಷಮೆ ಕೇಳಲು ಸೂಚಿಸಬೇಕು, ಅವರಿಗೆ ಭಾರತೀಯ ನ್ಯಾಯ ಸಂಹಿತೆಯ ಅಡಿ ದಂಡವನ್ನು ವಿಧಿಸಬೇಕು ಎಂದು ಕೂಡಾ ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ.
2024ರ ಮೇ 2ರಂದು ಲೋಕಸಭೆ ಚುನಾವಣಾ ಪ್ರಚಾರ ನಡೆಸಿದ್ದ ರಾಹುಲ್ ಗಾಂಧಿ ಅವರು ಹಾಸನದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ, ದರ ವಿಡಿಯೋ ಮಾಡಿದ್ದಾರೆ. ಈ ರೀತಿಯ ಅತ್ಯಾಚಾರ ಮಾಡಿರುವ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ಮೋದಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.
ರಾಹುಲ್ ಗಾಂಧಿ ಈ ಹೇಳಿಕೆ ನೀಡಿ ಮಹಿಳೆಯರ, ಅದರಲ್ಲೂ ಮುಖ್ಯವಾಗಿ ಹಾಸನದ ಮಹಿಳೆಯರ ಘನತೆಗೆ ಹಾನಿ ಉಂಟು ಮಾಡಿದ್ದಾರೆ. ಸುಳ್ಳು ಸುದ್ದಿ ಮೂಲಕ ಮತಗಳಿಸುವ ಯತ್ನ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.