ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅನಗತ್ಯವಾಗಿ ಕೈಬಿಡುವ ಉದ್ದೇಶದಿಂದ ‘ಅರ್ಜಿ ನಮೂನೆ 7’ (Form-7) ಅನ್ನು ದುರುಪಯೋಗಪಡಿಸಿಕೊಂಡವರ ಮತ್ತು ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದವರ ವಿರುದ್ಧ ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಪೊಲೀಸ್ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಇಂಡಿಯಾ’ ಒಕ್ಕೂಟವು ಆಯೋಜಿಸಿದ್ದ “ಮತಗಳ್ಳತನ ನಿಲ್ಲಿಸಿ, ದೇಶ ಉಳಿಸಿ” ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಅಕ್ರಮದ ವಿರುದ್ಧ ತಮ್ಮ ಸರ್ಕಾರ ಮತ್ತು ಕಾಂಗ್ರೆಸ್ ಕಾನೂನು ಚೌಕಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ನಾವು ಕೇವಲ ಚುನಾವಣಾ ಆಯೋಗದ ವಿರುದ್ಧ ಮಾತ್ರ ಹೋರಾಟ ಮಾಡುತ್ತಿಲ್ಲ. ಚುನಾವಣಾ ಆಯೋಗವನ್ನು ಮುನ್ನೆಲೆಯಲ್ಲಿಟ್ಟುಕೊಂಡು ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿರುವ ಬಿಜೆಪಿಯ ಹುನ್ನಾರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿದೆ ಎಂದು ಸಿಎಂ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಮೋದಿ ಅವರು ನನಗೆ ವೆರಿಗುಡ್ ಡಿ.ಕೆ. ಎಂದರು: ಡಿಸಿಎಂ ಡಿ ಕೆ ಶಿವಕುಮಾರ್
ಹಾಗೆಯೇ ಚುನಾವಣಾ ಆಯೋಗದಿಂದ ನೇಮಕಗೊಂಡಿರುವ ಎಲ್ಲಾ ಬಿಎಲ್‌ಒಗಳಿಗೆ ಎಚ್ಚರಿಕೆ ನೀಡಿರುವ ಸಿಎಂ, ನಕಲಿ ಅರ್ಜಿಗಳನ್ನು ತಂದುಕೊಟ್ಟವರ ಮತ್ತು ಅಕ್ರಮಕ್ಕೆ ಪ್ರಚೋದನೆ ನೀಡಿದವರ ಕುರಿತು ಸಿಸಿಟಿವಿ ದಾಖಲೆಗಳಿವೆ. ಈ ಬಗ್ಗೆ ಪ್ರಕರಣ ದಾಖಲಿಸಿ, ಸಮಗ್ರ ತನಿಖೆ ನಡೆಸಿ ಸಮಾಜಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೆ ಮತದಾನದ ಹಕ್ಕೇ ಬದುಕಿನ ಹಕ್ಕಾಗಿದೆ. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ತೆಗೆದುಹಾಕುವ ಯತ್ನವು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ವಿಧಾನವನ್ನು ನಾವು ಒಪ್ಪುವುದಿಲ್ಲ. ಈ ಪ್ರಕ್ರಿಯೆಯಲ್ಲಿ ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ಅರ್ಹ ಮತದಾರನಿಗೂ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.




