ಸರ್ಕಾರಿ ಕಚೇರಿಗಳು ಮತ್ತು ಕಚೇರಿಗಳ ಆವರಣಗಳಲ್ಲಿ ಧೂಮಪಾನ ಮತ್ತು ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಂಬಾಕು ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿಯೂ ಧೂಮಪಾನ ಮತ್ತು ತಂಬಾಕು ಸೇವನೆ ಮಾಡಬಾರದು ಎಂದು ಸರ್ಕಾರ ಹೇಳಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021ರ 31ನೇ ಅಂಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ವಸ್ತುಗಳು ಮತ್ತು ಪಾನೀಯ ಸೇವನೆಯನ್ನು ನಿಷೇಧಿಸಲಾಗಿದೆ. ಆದರೂ, ಸರ್ಕಾರಿ ಕಚೇರಿಗಳ ಆವರಣದಲ್ಲಿ ಧೂಮಪಾನ, ತಂಬಾಕು ಸೇವನೆ ನಡೆಯುತ್ತಿರುವುದ ಕಂಡುಬಂದಿದೆ. ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರನ್ನು ಧೂಮಪಾನದಿಂದ ರಕ್ಷಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.
ಸೂಚನೆಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು,ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಆದೇಶಿಸಿದೆ.