18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.
ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಬೆಂಗಳೂರಿನ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಯಿತು.
ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, “ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ” ಎಂದು ದೂರಿದರು.
“ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ. ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ. ಸ್ಪೀಕರ್ ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.
“ಸ್ಪೀಕರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಜನಪ್ರತಿನಿಧಿಯನ್ನು 6 ತಿಂಗಳ ಕಾಲ ಅಮಾನತು ಮಾಡಿ, ವಿಧಾನಸೌಧದ ಮೊಗಸಾಲೆಗೂ ಬರಬಾರದೆಂದು ಆದೇಶ ಮಾಡಿದ್ದಾರೆ. ಸ್ಪೀಕರ್ ಅವರು ಖಂಡಿತವಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿ ಹಾಗೂ ಮುಖ್ಯಮಂತ್ರಿಗಳನ್ನು ತೃಪ್ತಿಪಡಿಸಲು ಕಾನೂನು ಬಾಹಿರವಾಗಿ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ಈ ರೀತಿ ಆದೇಶ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
“ಅಮಾನತು ಹಿಂಪಡೆಯುವುದಾಗಿ ಹೇಳಿಕೆ ನೀಡಿದ್ದ ಸ್ಪೀಕರ್ ಅವರು ಯಾತಕ್ಕೋಸ್ಕರ ಕಾಯುತ್ತಿದ್ದಾರೆ ಎಂದು ಪ್ರಶ್ನಿಸಿದರು. ತಮ್ಮ ನಿರ್ಣಯ ಸಂವಿಧಾನವಿರೋಧಿ ಎಂಬುದು ಸ್ಪೀಕರ್ ಅವರಿಗೂ ಅರ್ಥವಾಗಿದೆ. ಆದರೂ ಕೂಡ ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಸ್ಪೀಕರ್ ಅವರು ಭಂಡತನ ಪ್ರದರ್ಶಿಸುತ್ತಿದ್ದಾರೆ. ಇದು ಮತದಾರರಿಗೆ ಮಾಡಿದ ಅವಮಾನ ಎಂದರಲ್ಲದೆ, 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು” ಎಂದು ಆಗ್ರಹಿಸಿದರು.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.