ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ದೇಶದ ಸುಮಾರು 14 ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆ ಸುರಿಯಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಕೊಪ್ಪಳ, ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಇನ್ನು, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.



