ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟಾರೆಯಾಗಿ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಅಂದರೆ ನವೆಂಬರ್ 8ರಿಂದ ನವೆಂಬರ್ 14ರವರಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಈವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿತ್ತು. ಆದರೆ ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಕೊಂಚ ಕಡಿಮೆಯಾಗಲಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.
ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 8 ಮತ್ತು 9ರಂದು ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣ ಹವಾಮಾನವಿರಲಿದೆ ಎಂದು ಐಎಂಡಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಮತ್ತು ಬಳ್ಳಾರಿ ಸೇರಿದಂತೆ 8 ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 9ರಿಂದ 14ರವರೆಗೆ ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಸೇರಿದಂತೆ ವಿವಿಧ ದಿನಗಳಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಒಣ ಹವಾಮಾನ ಮುಂದುವರಿಯಲಿದೆ.




