ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಹಲವಾರು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ. ಆದಾಗ್ಯೂ, ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ 9 ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಮಳೆ ಅಬ್ಬರ ಹೆಚ್ವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆ ಸುರಿಯಲಿದೆ ಎಂದು ಹೇಳಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಜೊತೆಗೆ, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇನ್ನು, ಕರಾವಳಿ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಒಣಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೀದರ್, ರಾಯಚೂರು ಮತ್ತು ಕಲಬುರಗಿಯಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಭಾಗಗಳಲದಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ. ಹಗಲಿನಲ್ಲಿ ಬಿರುಸಾದ ಬಿಸಿಲು ಮತ್ತು ರಾತ್ರಿಯ ವೇಳೆಯಲ್ಲಿ ತಂಪು ಗಾಳಿ ಆವರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಈ ಹವಾಮಾನ ವೈಪರೀತ್ಯದಿಂದಾಗಿ ಜನರಲ್ಲಿ ಶೀತ, ಗಂಟಲು ನೋವು ಹಾಗೂ ಜ್ವರದಂತಹ ವೈರಲ್ ಸೋಂಕುಗಳು ಹೆಚ್ಚಾಗುವ ಸಾಧ್ಯತೆಯಿದೆ. ರೋಗನಿರೋಧಕ ಶಕ್ತಿ ಕಡಿಮೆಯಾಗುವ ಈ ಸಮಯದಲ್ಲಿ ಕಾಯಿಸಿ ಆರಿದ ನೀರನ್ನೇ ಕುಡಿಯಲು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.




