ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನ ಗೌರವಾನ್ವಿತ ಸಭಾಪತಿಗಳಾದ ಸಲೀಂ ಅಹಮ್ಮದ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಇಂದು ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ಸಭಾಪತಿಗಳು ನೂತನ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.
ಇತ್ತೀಚೆಗೆ ಅಕ್ಟೋಬರ್ 2026ರಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ತಿನ 2 ಶಿಕ್ಷಕರ ಮತ್ತು 2 ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಶೀಲ್ ಜಿ. ನಮೋಶಿ, ಪಶ್ಚಿಮ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ವಿ. ಸಂಕನೂರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದಿಂದ ಬಿಜೆಪಿ. ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಆಯ್ಕೆಯಾಗಿದ್ದರು.
ಇದನ್ನೂ ಓದಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಉಮಾಶ್ರೀ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಸದಸ್ಯರಾದ ಟಿ.ಎ. ಶರವಣ, ಎನ್. ರವಿಕುಮಾರ್, ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಹಾಗೂ ಸದಸ್ಯರ ಕುಟುಂಬ ವರ್ಗ ಮತ್ತಿತರರು ಉಪಸ್ಥಿತರಿದ್ದರು.



