ವಿಶ್ವಗುರು ಬಸವಣ್ಣನವರ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ, ಲೇಖಕ ರವಿ ಹಂಜ್ ಅವರು ರಚಿಸಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಈ ಬೆನ್ನಲ್ಲೇ, ರವಿ ಹಂಜ್ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಅವರು ಅಮೆರಿಕಕ್ಕೆ ಪಲಾಯನ ಮಾಡಿದ್ದಾರೆ.
‘ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರು ಮತ್ತು ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಸಮುದಾಯದ ಹಲವು ನಾಯಕರು ಕೃತಿಯ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ.
ಬಸವಣ್ಣನವರ ಕುರಿತು ರವಿ ಹಂಜ್ ಅವರು ಆಡಿರುವ ಅವಹೇಳನಕಾರಿ ಮಾತುಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಆರಂಭದಲ್ಲೇ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿರುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಬಸವಣ್ಣನವರು, ಶಿವಶರಣರು ಹಾಗೂ ವಚನ ಪರಂಪರೆಯ ಘನತೆಗೆ ಧಕ್ಕೆ ತರುವ ಕೃತ್ಯಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಅಲ್ಲದೆ, ವಿವಾದಿತ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ, ಪುಸ್ತಕದ ಪ್ರಕಾಶಕರಾದ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂಬ ಅಭಿಪ್ರಾಯವನ್ನು ಸಂಪುಟ ಸಭೆ ವ್ಯಕ್ತಪಡಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


