ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠ ಇಂದು (ಮೇ 29) ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಪಿಐಎಲ್ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್ ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು. ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.
ನ್ಯಾ.ಎನ್.ವಿ.ಅಂಜಾರಿಯಾ ಅವರು ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದು ಇಂದು ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದರು. ಈ ವೇಳೆ, “ನಿಮ್ಮೆಲ್ಲರಿಗೂ ತುಂಬಾ ಧನ್ಯವಾದಗಳು. ಇದು ನನ್ನ ಕೊನೆಯ ಬಾರಿ ಹೈಕೋರ್ಟ್ ಪೀಠದಲ್ಲಿ ಕುಳಿತಿದ್ದೇನೆ. ಎಲ್ಲ ವಕೀಲರಿಗೆ ಮತ್ತು ಸಿಬ್ಬಂದಿಗೆ ಧನ್ಯವಾದ ಹೇಳುತ್ತೇನೆ. ಇದು ನನ್ನ ಕೊನೆಯ ಆದೇಶ” ಎಂದು ತಿಳಿಸಿದರು.
ಏಪ್ರಿಲ್ 16, 2022 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್ ದಾಖಲಾಗಿ 155 ಮದಿ ಮೇಲೆ ಕೇಸ್ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.