ಬಿಜೆಪಿ ಎಂಎಲ್‌ಸಿ ಮತ್ತು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಕೀಳುಮಟ್ಟದ ಪದದ ಮೂಲಕ ಟೀಕಿಸಿ, ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರವಿಕುಮಾರ್ ನಗುನಗುತ್ತಾ ಹೇಳಿರುವ ಬಗ್ಗೆ ‘ಇಂಡಿಯಾ ಟುಡೇ’ ವರದಿ ಮಾಡಿದೆ.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ರವಿಕುಮಾರ್ ಈ ಹಿಂದೆಯೂ ಸಹ ಸರ್ಕಾರಿ ಮಹಿಳಾ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಮೇ 24 ರಂದು ಕಲಬುರಗಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ರವಿಕುಮಾರ್, “ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಝಿಯಾ ತರನ್ನುಮ್ ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿನ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ. ನಿಮ್ಮ ಚಪ್ಪಾಳೆ ನೋಡಿದರೆ, ಜಿಲ್ಲಾಧಿಕಾರಿ ನಿಜಕ್ಕೂ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತಿದೆ” ಎಂದು ಹೇಳಿದ್ದರು.
ಕಲಬುರಗಿ ಈ ಹೇಳಿಕೆಯ ನಂತರ ರವಿಕುಮಾರ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಹಾಗೆಯೇ ರಾಜ್ಯಪಾಲ ಮತ್ತು ಸಭಾಪತಿಗಳಿಗೆ ಕಾಂಗ್ರೆಸ್ ನಾಯಕರು ಈ ಬಗ್ಗೆ ದೂರು ನೀಡಿದ್ದರು.