ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಐದು ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಅಮಾನತ್ತು ಮಾಡಿದ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.
ಗುಪ್ತಚರ ಇಲಾಖೆಯ ಅಧಿಕಾರಿಗಳ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಒತ್ತಡ ಹೇರಲಾಗಿತ್ತು. ಆದರೆ ಇದೀಗ ಗುಪ್ತಚರ ಇಲಾಖೆಯ ಎಡಿಜಿಪಿ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದೆ.
ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ಕೂಡಾ ನೀಡಿದ್ದರು. ಇಂಟಲಿಜೆನ್ಸ್ ಫೈಲ್ಯೂರ್ ಆದ್ರೂ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವರಿಗೆ ದೂರು ನೀಡಲಾಗಿತ್ತು.
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಗೋವಿಂದರಾಜ್ ಅವರ ಒತ್ತಡದ ಕಾರಣದಿಂದಲೇ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗಿತ್ತು ಎಂದು ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿದ್ದವು. ಲಕ್ಷಾಂತರ ಜನರು ಸೇರುವ ಬಗ್ಗೆ ಮಾಹಿತಿ ನೀಡುವಲ್ಲಿ ಗುಪ್ತಚರ ಇಲಾಖೆಯು ವಿಫಲವಾಗಿತ್ತು ಎಂದೂ ವಿರೋಧಪಕ್ಷಗಳು ಆರೋಪಿಸಿದ್ದವು.
ಕೊನೆಗೂ ಒತ್ತಡಕ್ಕೆ ಮಣಿದು ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.