ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಜನರ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ದಾಖಲಿಸಿಕೊಂಡಿತ್ತು.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಮಧ್ಯಾಹ್ನ ಈ ಕುರಿತು ವಿಚಾರಣೆ ನಡೆಸಿತು. ಸರ್ಕಾರದ ಪರ ಹಾಜರಿದ್ದ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಸರ್ಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಬಗ್ಗೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಹಲವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮನವಿಯನ್ನೂ ಆಲಿಸಿದ ನ್ಯಾಯಪೀಠ, ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಅಡ್ವಕೇಟ್ ಜನರಲ್ ಅವರಿಗೆ ನಿರ್ದೇಶಿಸಿ ವಿಚಾರಣೆಯನ್ನು ಜೂ. 10ಕ್ಕೆ (ಮಂಗಳವಾರ) ಮುಂದೂಡಿದೆ.