ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?
ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿರಬೇಕು. ಈ ಮೂಲಕ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ತಾಕೀತು ಮಾಡಿದ್ದಾರೆ.
ಸರ್ಕಾರಿ ಪತ್ರ ವ್ಯವಹಾರಗಳಲ್ಲಿ ಕಡತದ ಟಿಪ್ಪಣಿಗಳು ಕನ್ನಡದಲ್ಲಿಲ್ಲದ ಬಗ್ಗೆ ಗಮನಿಸಿದ್ದ ಸಿಎಂ ಗರಂ ಆಗಿದ್ದರು. ಕಡತದಲ್ಲಿನ ಟಿಪ್ಪಣಿ ಮತ್ತು ಪತ್ರ ವ್ಯವಹಾರಗಳು ಕನ್ನಡದಲ್ಲಿ ಬಾರದಿದ್ದ ಪಕ್ಷದಲ್ಲಿ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯಲು ಸಿಎಂ ನಿರ್ದೇಶನ ಕೊಟ್ಟಿದ್ದರು.
ಸರ್ಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲ ಅಧಿಕಾರಿ/ನೌಕರರು ಕಟ್ಟುನಿಟ್ಟಾಗಿ ಕನ್ನಡ ಬಳಕೆ ಜಾರಿಗೊಳಿಸಬೇಕು ಸೂಚನೆ ನೀಡಿದ್ದರು. ಹೀಗಾಗಿ, ಈ ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ವೈಯಕ್ತಿಕವಾಗಿ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಬಳಸುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಕ್ರಮ . ಅದರಂತೆ ರಾಜ್ಯದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಕನ್ನಡ ಭಾಷೆಯನ್ನು ಬಳಸುವಂತೆ ಸರ್ಕಾರ ಆದೇಶ ಹೊರಡಿಸಬೇಕು .