ಮಹತ್ವದ ಬೆಳವಣಿಗೆಯೊಂದರಲ್ಲಿ ಆಡಳಿತಕ್ಕೆ ಮೇಜರ್ ಸರ್ಜರಿ ನಡೆಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಧಿಕಾರಿಗಳ ಸಹಿತ ಒಟ್ಟು 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ, ಜೂನ್ 17ರಂದು ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ- ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಶ್ರೀಮತಿ ಜಾನಕಿ ಕೆ ಎಂ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಶ್ರೀಮತಿ ಸತ್ಯಭಾಮ ಅವರನ್ನು ವರ್ಗಾವಣೆಗೊಳಿಸಿ, ಮುಂದಿನ ಆದೇಶದವರೆಗೆ ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಅವರನ್ನು ರಾಜ್ಯ ಯೋಜನಾ ನಿರ್ದೇಶಕರಾಗಿ ನೇಮಿಸಲಾಗಿದೆ. ಇವರ ಸ್ಥಾನಕ್ಕೆ ಹಾಸನ ಜಿಲ್ಲಾಧಿಕಾರಿಯಾಗಿ ಲತಾ ಕುಮಾರಿ ಅವರನ್ನು ನೇಮಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಆರೋಗ್ಯ ನಿರ್ದೇಶನಾಲಯ, ಬೆಂಗಳೂರು ಮಿಷನ್ ನಿರ್ದೇಶಕರಾಗಿದ್ದ ಡಾ. ನವೀನ್ ಭಟ್ ವೈ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ನೇಮಿಸಲಾಗಿದೆ. ಡಾ. ನವೀನ್ ಭಟ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಸಿಇಓ ಆಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.