ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿಯಾಗಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಪೊಲೀಸರು ಮಂಗಳವಾರ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಗಂಭೀರ ಭದ್ರತಾ ಲೋಪ ಬೆಳಕಿಗೆ ಬಂದಿದೆ.
ಮಂಗಳವಾರ ಮಧ್ಯಾಹ್ನ ಸಿಸಿಬಿ ಅಧಿಕಾರಿಗಳ ತಂಡ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿತ್ತು. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಇರಿಸಲಾಗಿರುವ ಬ್ಯಾರಕ್‌ನಲ್ಲಿ ‘ಕೀ-ಪ್ಯಾಡ್ ಮೊಬೈಲ್’ ಪತ್ತೆಯಾಗಿದೆ.
ಅತ್ಯಂತ ಬಿಗಿ ಭದ್ರತೆ ಇರುವ ಜೈಲಿನೊಳಗೆ ನಿಷೇಧಿತ ಎಲೆಕ್ಟ್ರಾನಿಕ್ ಸಾಧನ ಹೇಗೆ ತಲುಪಿತು, ಇದನ್ನು ಪೂರೈಸಿದವರು ಯಾರು ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ, ಕರ್ತವ್ಯ ಲೋಪ ಎಸಗಿದ ಹಿರಿಯ ಜೈಲು ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ ಮತ್ತು ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿನ ಲೋಪಗಳಿಗಾಗಿ ಮತ್ತೊಬ್ಬರಿಗೆ ನೋಟಿಸ್ ನೀಡಿದ್ದಾರೆ. ಜೈಲು ಸಹಾಯಕ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರ ಅವರನ್ನು ಕರ್ತವ್ಯ ಲೋಪಕ್ಕಾಗಿ ಅಮಾನತುಗೊಳಿಸಲಾಗಿದೆ. ಏತನ್ಮಧ್ಯೆ, ಭದ್ರತಾ ಲೋಪಗಳಿಗೆ ವಿವರಣೆ ಕೋರಿ ಜೈಲು ಸೂಪರಿಂಟೆಂಡೆಂಟ್ ಅನ್ಸುಚ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪ್ರಭಾವಿ ಹಾಗೂ ಹೈಪ್ರೊಫೈಲ್ ಕೈದಿಗಳಿಗೆ ನಿಯಮಗಳನ್ನು ಗಾಳಿಗೆ ತೂರಿ ‘ವಿಐಪಿ ಸೌಲಭ್ಯ’ಗಳನ್ನು ಒದಗಿಸಲಾಗುತ್ತಿದೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿಬರುತ್ತಿದ್ದವು. ಇದೀಗ ಶಿಕ್ಷೆಗೊಳಗಾಗಿರುವ ಜನಪ್ರತಿನಿಧಿಯೊಬ್ಬರ ಬಳಿಯೇ ಮೊಬೈಲ್ ಪತ್ತೆಯಾಗಿರುವುದು, ಜೈಲಿನ ಭದ್ರತಾ ವ್ಯವಸ್ಥೆ ಮತ್ತು ಸಿಬ್ಬಂದಿಯ ಕಾರ್ಯವೈಖರಿಯ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಘಟನೆಯು ಜೈಲಿನಲ್ಲಿನ ಭ್ರಷ್ಟಾಚಾರದ ಆರೋಪಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.
ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, 36 ವರ್ಷದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಪ್ರಸ್ತುತ ಅವರು ಪರಪ್ಪನ ಅಗ್ರಹಾರದಲ್ಲಿ ಆಜೀವ ಶಿಕ್ಷೆ ಅನುಭವಿಸುತ್ತಿದ್ದಾರೆ.




