ಕರ್ನಾಟಕದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ತಡೆಯನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು ಸಿಬಿಐ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ನವೆಂಬರ್ 7 ರೊಳಗೆ ಡಿ ಕೆ ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ಕೇಳಿದೆ.
ಇದಕ್ಕೂ ಮುನ್ನ ಜುಲೈನಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.
ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಮಣಿಪುರಕ್ಕಿಂತ ಇಸ್ರೇಲ್ –ಹಮಸ್ ಯುದ್ಧದಲ್ಲಿ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ
ಫೆಬ್ರವರಿಯಲ್ಲಿ, ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿತ್ತು.
2017ರಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ಬಳಿಕ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿತ್ತು.
ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಮಾತನಾಡಿ, ಸಿಬಿಐನ ಶೇ.90 ರಷ್ಟು ತನಿಖೆ ಮುಗಿದಿದೆ ಆದರೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯಿಂದಾಗಿ ಅದು ಮುಂದುವರಿಯುತ್ತಿಲ್ಲ. ಅಫಿಡವಿಟ್‌ನಲ್ಲಿ ಮಾಡಿದ ಸುಳ್ಳು ಹೇಳಿಕೆಯ ಆಧಾರದ ಮೇಲೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಪೀಠಕ್ಕೆ ತಿಳಿಸಿದರು.
ಕೇಂದ್ರ ಏಜೆನ್ಸಿಯ ಮನವಿಗೆ ಸಮ್ಮತಿಸಿದ ನ್ಯಾಯಮೂರ್ತಿ ಬೋಸ್ ನೇತೃತ್ವದ ಪೀಠವು ಉಪಮುಖ್ಯಮಂತ್ರಿ ಮತ್ತು ಇತರ ಪ್ರತಿವಾದಿಗಳ ಪ್ರತಿಕ್ರಿಯೆಯನ್ನು ಕೋರಿ ನೋಟಿಸ್ ಜಾರಿಗೊಳಿಸಿತು. ಆದರೆ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನ್ಯಾಯಾಲಯ ಸ್ಪಷ್ಟವಾಗಿ ನಿರಾಕರಿಸಿತು.