ಬೇಸಿಗೆಯ ಬಿಸಿಲಿನ ನಡುವೆಯೂ ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಆದಾಗ್ಯೂ, ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಜಲಮೂಲಗಳು ಬತ್ತಿಹೋಗುತ್ತಿವೆ. ಹೀಗಾಗಿ, 16 ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಈಗಾಗಲೇ, ಹಲವು ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ.
ಬೆಂಗಳೂರಿನ ಉತ್ತರ ಭಾಗದಲ್ಲಿಯೂ ನೀರಿನ ಸಮಸ್ಯೆ ವಿಪರೀತಗೊಳ್ಳುತ್ತಿದೆ. ಉತ್ತರ ಕರ್ನಾಟಕದಲ್ಲಿ ಭಾಗದಲ್ಲಿ ಕೆರೆಗಳು, ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಜನರಿಗೆ ಮಾತ್ರವಲ್ಲದೆ, ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದೆ.
ಕರ್ನಾಟಕದ 236 ತಾಲೂಕುಗಳ ಪೈಕಿ 48 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದರಾಗಿದೆ. ಕಲಬುರಗಿ, ಯಾದಗಿರಿ, ಕೊಪ್ಪಳ, ಧಾರವಾಡ, ಬಾಗಲಕೋಟೆ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಬಿಗಡಲಾಯಿಸಿದೆ.
ಮೇ ಆರಂಭದ ವೇಳೆಗೆ ನೀರಿನ ಸಮಸ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನೀರಿನ ಬವಣೆಯನ್ನು ನೀಗಿಸಲು ಟ್ಯಾಂಕರ್‌ಗಳಲ್ಲಿ ನೀರು ಸರಬರಾಜು ಮಾಡಲು ನೀರಿನ ಸಮಸ್ಯೆಯಿರುವ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಖಾತೆಯಿಂದ ಹಣ ಬಿಡುಗಡೆ ಮಾಡಲಾಗುತ್ತಿದೆ.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ, ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಎಂಜಿನಿಯರ್‌ಗಳು ಪಿಡಿಒಗಳ ಜೊತೆ ಸಮಾಲೋಚನೆ ನಡೆಸಿ, ಕುಡಿಯುವ ನೀರು ಪೂರೈಕೆ ಮತ್ತು ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.