ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತೆರೆ ಎಳೆದಿದ್ದಾರೆ. “ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರ ಅತ್ಯಂತ ಸಮರ್ಥವಾಗಿ ನಡೆಯುತ್ತಿದ್ದು, ಮೂರನೇ ಮುಖ್ಯಮಂತ್ರಿ ಬದಲಾವಣೆಯ ಕುರಿತು ಅನಗತ್ಯ ಚರ್ಚೆಯ ಅಗತ್ಯವಿಲ್ಲ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಏಕೈಕ ಗುರಿ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಕಾರ್ಯವೈಖರಿ, ಆಂತರಿಕ ಭಿನ್ನಾಭಿಪ್ರಾಯ, ಬರ ಪರಿಹಾರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಪ್ರತಿಕ್ರಿಯಿಸಿದರು.
“ಕಳೆದ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲು ಶ್ರಮಿಸಿದ್ದಾರೆ. ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಳಿದ ಭರವಸೆಗಳನ್ನು ಪೂರ್ಣಗೊಳಿಸುವತ್ತ ಗಮನಹರಿಸಿದ್ದಾರೆ. ಸರ್ಕಾರದ ಅವಧಿ ಇನ್ನೂ ಒಂದೂವರೆ ವರ್ಷ ಬಾಕಿಯಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದರು.
ಶಾಸಕರು ಮತ್ತು ಸಚಿವರಲ್ಲಿ ಅಸಮಾಧಾನವಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪರಮೇಶ್ವರ್, “ಯಾರಿಗಾದರೂ ಅಸಮಾಧಾನವಿದ್ದರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಮುಕ್ತವಾಗಿ ಹೇಳಿಕೊಳ್ಳಬಹುದು. ಆದರೆ, ಇತ್ತೀಚೆಗೆ ನಡೆದ ಸಭೆಯಲ್ಲಿ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ವಿರೋಧ ಪಕ್ಷಗಳು ತಮ್ಮ ಮನೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದನ್ನು ಬಿಟ್ಟು, ಕಾಂಗ್ರೆಸ್ನಲ್ಲಿ ಭಿನ್ನಮತವಿದೆ ಎಂಬ ಸುಳ್ಳು ವಾತಾವರಣ ಸೃಷ್ಟಿಸಲು ಯತ್ನಿಸುತ್ತಿವೆ” ಎಂದು ಆರೋಪಿಸಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಐದನೇ ಸಾಲಿನಲ್ಲಿ ಕೂರಿಸಿ ಅಗೌರವ ತೋರಲಾಗಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಪರಮೇಶ್ವರ್, “ಕಾರ್ಯಕ್ರಮದಲ್ಲಿ ಯಾರಿಗೂ ಆಸನಗಳನ್ನು ಕಾಯ್ದಿರಿಸಿರಲಿಲ್ಲ. ಸಿದ್ದರಾಮಯ್ಯ ಅವರು ತಡವಾಗಿ ಬಂದಿದ್ದರಿಂದ ಐದನೇ ಸಾಲಿನಲ್ಲಿ ಕುಳಿತರು. ಅವರಿಗೆ ಅಗೌರವ ತೋರುವ ಅಥವಾ ನಿರ್ಲಕ್ಷಿಸುವ ಯಾವುದೇ ಉದ್ದೇಶವಿರಲಿಲ್ಲ. ಅವರು ರಾಜ್ಯ ಮತ್ತು ಪಕ್ಷದ ಅತ್ಯಂತ ಹಿರಿಯ ಹಾಗೂ ಗೌರವಾನ್ವಿತ ನಾಯಕರು” ಎಂದು ತಿಳಿಸಿದರು.
ಇದೇ ವೇಳೆ, ಮುಂಬರುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಮಹಿಳಾ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಪ್ರತಿಕ್ರಿಯಿಸಿ, “ಮುಖ್ಯಮಂತ್ರಿಗಳು ದೆಹಲಿ ಭೇಟಿಯ ವೇಳೆ ಹೈಕಮಾಂಡ್ ಜೊತೆ ಈ ಬಗ್ಗೆ ಚರ್ಚಿಸಿದ್ದಾರೆ. ಅಧಿವೇಶನಕ್ಕೆ ಮುನ್ನ ಈ ವಿಷಯ ಮತ್ತೆ ಚರ್ಚೆಗೆ ಬರಬಹುದು” ಎಂದರು.
ರಾಜ್ಯದ ಬರ ಪರಿಸ್ಥಿತಿ ಕುರಿತು ಮಾತನಾಡಿದ ಕಂದಾಯ ಸಚಿವರು, “ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಲಾಗಿದೆ. ಪ್ರಧಾನಮಂತ್ರಿಗಳ ಕಚೇರಿ, ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರ ಭೇಟಿಗೆ ಸಮಯಾವಕಾಶ ಕೋರಿದ್ದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ಈ ಹಿಂದೆಯೂ ಬರ ಪರಿಹಾರಕ್ಕಾಗಿ ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಂತರವಷ್ಟೇ ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರ ಸರ್ಕಾರ ಸುಮಾರು 3,500 ಕೋಟಿ ರೂ. ಬಿಡುಗಡೆ ಮಾಡಿತ್ತು. ಈ ಬಾರಿಯೂ ಅಂತಹ ಪರಿಸ್ಥಿತಿ ಮರುಕಳಿಸಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ ಕೇಂದ್ರವು ಮಲತಾಯಿ ಧೋರಣೆ ತೋರಬಾರದು. ರೈತರ ಸಂಕಷ್ಟದಲ್ಲಿ ರಾಜಕೀಯ ಮಾಡಬಾರದು” ಎಂದು ಹೇಳಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ತಿರುಗೇಟು ನೀಡಿದ ಅವರು, “ರಾಜ್ಯ ಸರ್ಕಾರವು ಈಗಾಗಲೇ ತನ್ನ ಬೊಕ್ಕಸದಿಂದ ಎರಡು ಹಂತಗಳಲ್ಲಿ ತಲಾ 1,250 ಕೋಟಿ ರೂ.ಗಳಂತೆ ಬರ ಪರಿಹಾರ ನೀಡುತ್ತಿದೆ. ಬೊಮ್ಮಾಯಿ ಮತ್ತು ಕುಮಾರಸ್ವಾಮಿ ಅವರು ತಮ್ಮ ಪ್ರಭಾವ ಬಳಸಿ ಕೇಂದ್ರದಿಂದ ರಾಜ್ಯದ ರೈತರಿಗೆ ಪರಿಹಾರ ಕೊಡಿಸಲಿ, ಆಗ ನಾವೇ ಅವರನ್ನು ಅಭಿನಂದಿಸುತ್ತೇವೆ. ಬರ ಪರಿಹಾರಕ್ಕಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಿಎಂ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಕೇಂದ್ರದ ಪ್ರತಿಕ್ರಿಯೆ ನೋಡಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ತೀರ್ಮಾನಿಸಲಾಗುವುದು” ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕರಡು ಮತದಾರರ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಅಂತಿಮ ಪಟ್ಟಿ ಪ್ರಕಟವಾದ ಬಳಿಕ ಚುನಾವಣೆ ನಡೆಸಬಹುದು. ಅಥವಾ 2011ರ ಜನಗಣತಿ ಆಧಾರದ ಮೇಲೆ ಚುನಾವಣೆ ನಡೆಸಲು ಅನುಮತಿ ಕೋರುವ ಬಗ್ಗೆಯೂ ಸರ್ಕಾರ ಚಿಂತಿಸುತ್ತಿದೆ ಎಂದರು.
ರಾಜ್ಯದಲ್ಲಿ ಅಧಿಕೃತ ಮಾರ್ಗಸೂಚಿ ದರ ಮತ್ತು ಪ್ರಸ್ತುತ ಮಾರುಕಟ್ಟೆ ದರಗಳ ನಡುವೆ ಭಾರಿ ಅಂತರವಿದೆ. ಈ ಹಿನ್ನೆಲೆಯಲ್ಲಿ ಪ್ರದೇಶವಾರು ವಿಶ್ಲೇಷಣೆ ನಡೆಸಿ, ವೈಜ್ಞಾನಿಕವಾಗಿ ಮಾರ್ಗಸೂಚಿ ದರ ಪರಿಷ್ಕರಿಸುವ ಕುರಿತು ಸರ್ಕಾರ ಪರಿಶೀಲಿಸುತ್ತಿದೆ ಎಂದರು.
ಪೆಟ್ರೋಲ್ನಲ್ಲಿ ಶೇ. 20 ರಿಂದ 30 ರಷ್ಟು ಎಥೆನಾಲ್ ಮಿಶ್ರಣವಾಗುತ್ತಿದೆ ಎಂಬ ಸಚಿವ ರಿಜ್ವಾನ್ ಅರ್ಷದ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಪರಮೇಶ್ವರ್, “ಸಚಿವರು ರಾಜ್ಯದ ಕೆಲವು ಮಾದರಿಗಳ ಪ್ರಯೋಗಾಲಯದ ವರದಿ ಆಧರಿಸಿ ಮಾತನಾಡಿದ್ದಾರೆ. ವೈಜ್ಞಾನಿಕ ವರದಿ ಆಧಾರಿತ ಹೇಳಿಕೆಗಳನ್ನು ಟೀಕಿಸುವುದು ಸರಿಯಲ್ಲ” ಎಂದರು.



