ರಾಜ್ಯದಲ್ಲಿ ನೈಋತ್ಯ ಮುಂಗಾರು ಹವಾಮಾನದ ಪ್ರಭಾವ ಮುಂದುವರಿದಿದ್ದು, ಮುಂದಿನ 5 ದಿನಗಳ ಅವಧಿಯಲ್ಲಿ (ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 14) ರಾಜ್ಯದ ಒಟ್ಟು 18 ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಳ ಪರಿಣಾಮವಾಗಿ ಈ ಮಳೆ ವಾತಾವರಣ ಸೃಷ್ಟಿಯಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಜಾಗರೂಕರಾಗಿರಲು ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮಳೆ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್
ದಕ್ಷಿಣ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ 7 ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಇಲಾಖೆ ಹೇಳಿದೆ.
ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮುಖ್ಯವಾಗಿ ಸಂಜೆ ಹಾಗೂ ರಾತ್ರಿ ವೇಳೆ ಮೋಡಕವಿದ ವಾತಾವರಣದೊಂದಿಗೆ ಮಿಂಚು ಸಹಿತ ಸಾಧಾರಣ ಮಳೆ ಅಥವಾ ತುಂತುರು ಮಳೆಯಾಗುವ ಸನ್ನಿವೇಶವಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸಲಹೆ ನೀಡಿದೆ.





